ಬೆಂಗಳೂರು: ಆಶಾ ಕಾರ್ಯಕರ್ತೆಯರ ಬೆನ್ನಲ್ಲೇ ಇದೀಗ ಅಕ್ಷರ ದಾಸೋಹ ನೌಕರರು ಪ್ರತಿಭಟನೆಗೆ ಮುಂದಾಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಂದು ಅಕ್ಷರ ದಾಸೋಹ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಬಂದ್ ಆಗಲಿದೆ. ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳ ಗಡಿಯಾದ ರಾಷ್ಟ್ರೀಯ ಹೆದ್ದಾರಿ ಬಳಿಯ ರಾಮಸಂದ್ರ ಗೇಟ್ ಬಳಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಮಾಹಿತಿ ನೀಡಿದೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಮಹಿಳಾ ನೌಕರರಿಗೆ ಕನಿಷ್ಠ 10,500 ರೂಪಾಯಿ ಗೌರವಧನ ನೀಡಬೇಕು ಮತ್ತು ಸಮವಸ್ತ್ರ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ. ಯಾವುದೇ ಕಾರಣಕ್ಕೂ ಬಿಸಿಯೂಟ ನೌಕರರನ್ನು ಕೆಲಸದಿಂದ ತೆಗೆಯಬಾರದು ಮತ್ತು ಅವರನ್ನು ಡಿ ಗ್ರೂಪ್ ನೌಕರರಾಗಿ ಪರಿಗಣಿಸಬೇಕು ಎಂದು ಆಗ್ರಹಿಸಲಾಗಿದೆ. ನೌಕರರು ಶಾಲೆಯ ಆವರಣವನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ನಿರ್ವಹಿಸಲು ಸಿದ್ಧರಾಗಿರುವುದರಿಂದ ಶಾಲೆಗಳಲ್ಲಿನ ಡಿ ದರ್ಜೆ ನೌಕರರ ಕೊರತೆ ನೀಗಿಸಿದಂತೆಯೂ ಆಗುತ್ತದೆ ಎಂದು ಸಮಿತಿ ತಿಳಿಸಿದೆ.


















