ಹಾವೇರಿ: ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕೆಲವರು ಲೈಟ್ ಕಂಬಕ್ಕೆ ಕಟ್ಟಿಹಾಕಿ ಮನ ಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ. ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಆರೋಪಿತರು ತಮ್ಮ ಮನೆಯ ಹೆಣ್ಣು ಮಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ನನ್ನ ಸಹೋದರ ಪ್ರಕಾಶ್, ಈ ರೀತಿ ಆರೋಪ ಮಾಡುವುದು ಸರಿಯಲ್ಲ, ನನಗೆ ಅವಳೊಂದಿಗೆ ಅನೈತಿಕ ಸಂಬಂಧ ಇಲ್ಲ ಎಂದಿದ್ದಾನೆ.
ಆದರೂ ಬಿಡದ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆತ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆಂದು ಮೃತನ ಸಹೋದರ ಫಕ್ಕೀರೇಶ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ.