ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಜೂನ್ 1ರಿಂದ ಜುಲೈ 4ರವರೆಗೆ ಒಟ್ಟಾರೆ ಶೇ.33ರಷ್ಟು ಮಳೆ ಕೊರತೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಭಾವ ಮುಂದುವರಿದಿದ್ದು, ರೈತರು ಸೇರಿದಂತೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಇದರ ನಡುವೆಯೇ ಭಾರತೀಯ ಹವಾಮಾನ ಇಲಾಖೆ ಕರಾವಳಿ ಹಾಗೂ ಮಲೆನಾಡಿನ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗದಗ, ಬೀದರ್, ಹಾವೇರಿ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಳೆಯೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ತೆರಳುವ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನೊಂದೆಡೆ, ಬಾಗಲಕೋಟೆ, ಬೆಳಗಾವಿ, ಗದಗ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಿದ್ದರೂ, ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರಿದಿದೆ. ಮುಂದಿನ ಕೆಲವು ದಿನಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ : SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!



















