ಹೈದರಾಬಾದ್: ತಿರುಪತಿ ಲಡ್ಡುದಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಹಲವರ ವಿರುದ್ಧ ದೂರು ದಾಖಲಾಗಿದೆ.
ಹೈದರಾಬಾದ್ ನಲ್ಲಿ ಈ ಕುರಿತು ದೂರು ದಾಖಲಾಗಿದೆ. ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯವನ್ನು “ದುರುದ್ದೇಶಪೂರಿತ ಕೃತ್ಯಗಳ” ಮೂಲಕ ಹಾಳು ಮಾಡಿದ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಜಗನ್ ವಿರುದ್ಧ ವಕೀಲರೊಬ್ಬರು ದೂರು ಸಲ್ಲಿಕೆ ಮಾಡಿದ್ದಾರೆ. ವಕೀಲೆ ಕೆ. ಕರುಣಾ ಸಾಗರ್ ಎಂಬುವವರು ಲ್ಯಾಬ್ ವರದಿ ಉಲ್ಲೇಖಿಸಿ, ಸೈದಾಬಾದ್ ಪೊಲೀಸರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ವೆಂಕಟೇಶ್ವರ ಸ್ವಾಮಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಮತ್ತು ಲಕ್ಷಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ, ಲ್ಯಾಬ್ ಪರೀಕ್ಷೆಯಲ್ಲಿ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಪತ್ತೆಯಾಗಿದೆ. ಹೀಗಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.