ಯಾದಗಿರಿ : ಅಕ್ರಮ ಅನ್ನಭಾಗ್ಯ ಅಕ್ಕಿ ದಾಸ್ತಾನು ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ದಾಳಿಯಾಗಿ ಮೂರು ದಿನ ಕಳೆದರೂ ಎಫ್ಐಆರ್ ದಾಕಲಾಗಿಲ್ಲ ಎಂದು ತಿಳಿದು ಬಂದಿದೆ. ಗುರುಮಠಕಲ್ ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದರು.
ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಸೂಚನೆ ಮೆರೆಗೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ನಾಲ್ಕು ಸಾವಿರ ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಡಿಮೆ ದರಕ್ಕೆ ಅನ್ನಭಾಗ್ಯ ಅಕ್ಕಿ ಖರೀದಿಸಿ, ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮ ಜಾಲವನ್ನು ಪತ್ತೆ ಹಚ್ಚಿದ್ದಾರೆ.
ಅಂತರಾಷ್ಟ್ರೀಯ ಬ್ರಾಂಡ್ ಗಳ ಹೆಸರಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡೈನಾಸ್ಟಿ, ವೋಲ್ಗಾ, ದಾರಾ, ಡಬಲ್ ಸ್ಟಾರ್ ಸೇರಿ ವಿವಿಧ ಬ್ರಾಂಡ್ ಗಳ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.
ಮುಂಬೈ, ಹೈದ್ರಾಬಾದ್, ಸೇರಿ ದೊಡ್ಡ ದೊಡ್ಡ ನಗರಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ “ಅನ್ನಭಾಗ್ಯ” ಯೋಜನೆಯ ಅಕ್ಕಿ ಮಾರಾಟ ಮಾಡುತ್ತಿರುವ ಜಾಲ ಪತ್ತೆಯಾಗಿದೆ.