ಬೆಂಗಳೂರು: ಸಿಲಿಕಾನ್ ಸಿಟಿ ಎಲ್ಲ ಕ್ಷೇತ್ರಗಳಲ್ಲಿಯೂ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು ಮತ್ತೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿ ಮಾತನಾಡಿದ್ದರು. ಸದ್ಯ ಸಂಸದ ಡಾ. ಮಂಜುನಾಥ್ ಇದಕ್ಕೆ ಧ್ವನಿಗೂಡಿಸಿದ್ದಾರೆ.
ಬೆಂಗಳೂರಿಗೆ ಎರಡನೇ ಏರ್ ಪೋರ್ಟ್ ಬೇಕೆಂದು ಅವರು ಮನವಿ ಮಾಡಿದ್ದಾರೆ. ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ.ಎನ್ ಮಂಜುನಾಥ್ ಅವರು ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಈ ವಿಷಯವಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರು ನಗರ ಇಡೀ ಪ್ರಪಂಚದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಇಲ್ಲಿ ಸುಮಾರು 750ಕ್ಕೂ ಅಧಿಕ ಮಲ್ಟಿ ನ್ಯಾಷನಲ್ ಕಂಪನಿಗಳು ತಲೆ ಎತ್ತಿವೆ. ಹೀಗಾಗಿ ಏರ್ ಟ್ರಾಫಿಕ್ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಮಂಜುನಾಥ್ ಅವರ ಪ್ರಯತ್ನಕ್ಕೆ ಬೆಂಗಳೂರಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.