ಬೆಂಗಳೂರು: ಕಲ್ಯಾಣ ಕರ್ನಾಟಕದ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಹೌದು, 2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಮೇ 19 ಹಾಗೂ ಶುಲ್ಕ ಪಾವತಿಗೆ ಮೇ 20 ಕೊನೆಯ ದಿನವಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಈ ಪರೀಕ್ಷೆ ಪೂರ್ವಭಾವಿ ತರಬೇತಿಗೆ ಅರ್ಹತೆ ಪಡೆಯಲು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಕಲಬುರಗಿ, ಕೊಪ್ಪಳ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗದಿತ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.
ಕೆಎಎಸ್ ತರಬೇತಿಗೆ 300 ಹಾಗೂ ಐಎಎಸ್ ತರಬೇತಿ 100 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಜನರಲ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 750 ರೂಪಾಯಿ ಆನ್ ಲೈನ್ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ ಸಿ, ಎಸ್ ಟಿ, ಪ್ರವರ್ಗ 1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಪೂರ್ವಭಾವಿ ತರಬೇತಿಗೆ 5 ತಿಂಗಳು ಹಾಗೂ ಮುಖ್ಯಪರೀಕ್ಷೆ ಹಾಗೂ ಸಂದರ್ಶನಕ್ಕೆ ಎಂದು 5 ತಿಂಗಳು ಉಚಿತ ತರಬೇತಿ ನೀಡಲಾಗುತ್ತದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಉಚಿತ ತರಬೇತಿಗೆ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮತ್ತು ಪದವಿ ಅಂತಿಮ ಸೆಮಿಸ್ಟರ್ ನಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕೆಇಎ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ, ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿ ಸಂಸ್ಥೆಗೆ ನಿಯೋಜಿಸಲಾಗುತ್ತದೆ. ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುತ್ತದೆ.