ಉಡುಪಿ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈವರೆಗೆ ೧೪,೧೧,೨೦೯ ಮಂದಿ ಆಧಾರ್ ಕಾರ್ಡ್ ಅನ್ನು ಹೊಂದಿದ್ದು, ಅವರಲ್ಲಿ ೧೩,೪೨,೨೭೫ ಜನರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ಶೇ.೬೮.೯೩ರಷ್ಟು ಆಗಿದೆ. ಬಾಕಿ ಉಳಿದ ಪ್ರತಿಯೊಬ್ಬರೂ ತಮ್ಮ ಆದಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಶೀಘ್ರದಲ್ಲಿಯೇ ಅಪ್ಡೇಟ್ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿರುವ ೧೫ ವರ್ಷ ಮೇಲ್ಪಟ್ಟ ಆಧಾರ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಸೆಂಟರ್ ಗಳಿಗೆ ತೆರಳಿ ತಮ್ಮ ಬೆರಳಚ್ಚು ನೀಡಿ, ಆಧಾರ್ ಕಾರ್ಡ್ ಗಳನ್ನು ಸಕ್ರಿಯಗೊಳಿಸಬೇಕು. ಇಲ್ಲವಾದಲ್ಲಿ ಆಧಾರ್ ನಿಷ್ಕ್ರೀಯಗೊಳ್ಳಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ೪೧,೧೧೫ ಯುವಕರು ಬಯೋಮೆಟ್ರಿಕ್ ನೀಡುವುದು ಬಾಕಿ ಇದೆ. ಪ್ರತಿಯೊಬ್ಬರು ಬಯೋಮೆಟ್ರಿಕ್ ನೀಡಿ ಅಪ್ಡೇಟ್ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.


















