ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಯೋಧರನ್ನು ಕರೆದೊಯ್ಯುತ್ತಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಏಳು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರು ಯೋಧರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ.
ಹೈದರಾಬಾದ್ನ ಗೋಲ್ಕೊಂಡ ಸೇನಾ ಶಿಬಿರದಿಂದ ಶಾಬಾದ್ ಪಟ್ಟಣದ ಕಡೆಗೆ ತರಬೇತಿ ಕಾರ್ಯಚಟುವಟಿಕೆಯ ಭಾಗವಾಗಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ತರಬೇತುದಾರರೊಬ್ಬರು ವಾಹನವನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಮಾರ್ಗಮಧ್ಯೆ ವಾಹನವು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಹಲವು ಬಾರಿ ಪಲ್ಟಿಯಾಗಿದೆ. ಬಳಿಕ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದು ನಿಂತಿದೆ. ಡಿಕ್ಕಿಯ ತೀವ್ರತೆಗೆ ವಾಹನದಲ್ಲಿದ್ದ ಏಳು ಮಂದಿ ಸೇನಾ ಸಿಬ್ಬಂದಿಗೆ ಗಂಭೀರ ಹಾಗೂ ಸಣ್ಣಪುಟ್ಟ ಗಾಯಗಳಾಗಿವೆ.
ಗೋಲ್ಕೊಂಡ ಸೇನಾ ಆಸ್ಪತ್ರೆಗೆ ಗಾಯಾಳುಗಳ ದಾಖಲು
ಅಪಘಾತ ಸಂಭವಿಸಿದ ತಕ್ಷಣ ಗಾಯಗೊಂಡ ಯೋಧರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ನ ಗೋಲ್ಕೊಂಡದಲ್ಲಿರುವ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಯೋಧರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಐವರು ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಸೇನಾ ಸಿಬ್ಬಂದಿ ಘಟನೆಯ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ ಮತ್ತು ಇದನ್ನು ಸ್ವಯಂ ಅಪಘಾತ ಎಂದು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಸೇನಾ ಸಿಬ್ಬಂದಿಯೇ ಸ್ವತಃ ಮಾಡಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.















