ಉಡುಪಿ : ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಅಂತರ್ ಜಿಲ್ಲಾ ಗಡಿ ರಸ್ತೆಗಳು ಒಳಗೊಂಡಂತೆ ಜಿಲ್ಲೆಯ 207 ಜಂಕ್ಷನ್ ಗಳಲ್ಲಿ 601 ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಳವಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಪಿ, ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸುವ ಯೋಜನೆಗೆ ‘ಸೇನಾ ದೃಷ್ಟಿ’ ಯೋಜನೆ ಎಂಬುದಾಗಿ ಹೆಸರಿಟ್ಟಿದ್ದು, ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.
ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಸಹಯೋಗದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಿ.ಸಿ.ಟಿ.ವಿ. ಕ್ಯಾಮೆರಾಗಳ ನಿಯಂತ್ರಣ ಕೊಠಡಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇರಲಿದೆ ಎಂದು ವಿವರಿಸಿದ್ದಾರೆ.
ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ ಯೋಜನೆಗೆ ಆ.15ರಂದು ಚಾಲನೆ ಸಿಗಲಿದ್ದು, ನವೆಂಬರ್ 1ರೊಳಗೆ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಕೋಮು ಸೂಕ್ಷ್ಮ ಪ್ರದೇಶಗಳಲ್ಲೂ ವಾಹನಗಳ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದಿದ್ದಾರೆ.
ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ 10 ಕಡೆ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಎಲ್ಲವನ್ನೂ ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯವರೇ ಅಳವಡಿಸಲಿದ್ದಾರೆ ಮತ್ತು 5 ವರ್ಷ ನಿರ್ವಹಣೆಯ ಜವಾಬ್ದಾರಿಯನ್ನೂ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಜುಲೈ 11 ರಿಂದ ರಾಜ್ಯ ಸರ್ಕಾರದ ಸೂಚನೆಯಂತೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಆರಂಭಿಸಿದ್ದು, ಈಗಾಗಲೇ 22 ಸಾವಿರ ಮನೆಗಳಿಗೆ ಪೊಲೀಸರು ಭೇಟಿ ನೀಡಿದ್ದಾರೆ.
ಇದರಡಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಕಳ್ಳತನ ಪ್ರಕರಣಗಳು ನಡೆಯುವ ಪ್ರದೇಶಗಳಲ್ಲಿ 50ರಿಂದ 100 ಜನರ ಗುಂಪುಗಳನ್ನು ರಚಿಸಿದ್ದೇವೆ. ಅವರು ಅಲ್ಲಿ ನಡೆಯುವ ಸಂಶಯಾಸ್ಪದ ವಿಚಾರಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ ಭದ್ರತೆಗಾಗಿ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ ಎಂದಿದ್ದಾರೆ.
ಈಗಾಗಲೇ ಸುಬ್ರಹ್ಮಣ್ಯ ನಗರದಲ್ಲಿ ಈ ಕಾರ್ಯಕ್ರಮವನ್ನು ಆರಂಭಿಸಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದೂ ಹೇಳಿದ್ದಾರೆ.
ಕಲ್ಸಂಕ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶನಿವಾರ, ಭಾನುವಾರಗಳಂದು ಬ್ಯಾರಿಕೇಡ್ ಅಳವಡಿಸುತ್ತಿದ್ದು, ಅದನ್ನು ತೆರವುಗೊಳಿಸುವ ಕುರಿತು ಸಭೆ ನಡೆಸಿ ಚರ್ಚಿಸಲಾಗುವುದು. ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸುವ ಬಗ್ಗೆಯೂ ಚರ್ಚಿಸುತ್ತೇವೆ ಎಂದಿದ್ದಾರೆ.



















