ಬೆಂಗಳೂರು: ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ. ಅಲ್ಲದೇ, ವಿದೇಶಕ್ಕೆ ಆಹಾರ ಧಾನ್ಯಗಳನ್ನು ರಫ್ತು ಮಾಡುವ ಪ್ರಮುಖ ರಾಷ್ಟ್ರಗಳಲ್ಲಿ ಭಾರತ ಕೂಡ ಒಂದಾಗಿರುವುದು ಹೆಮ್ಮೆಯ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ (Organic) ಮತ್ತು ಸಿರಿಧಾನ್ಯ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲೇ ಕೃಷಿ ಪ್ರಧಾನವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಆ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ. ಹೀಗಾಗಿ ಕೃಷಿಕರು ಹೆಚ್ಚು ಸಿರಿಧಾನ್ಯ ಬೆಳೆಯುವುದರತ್ತ ಆಸಕ್ತಿ ತೋರಿಸಬೇಕು. ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲದೇ, ಪ್ರೋತ್ಸಾಹ ನೀಡಲಾಗುವುದು ಎಂದಿದ್ದಾರೆ.