ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ತೀರ್ಮಾನದಂತೆಯೇ ಜಿಂದಾಲ್ ಕಂಪನಿಗೆ ಭೂಮಿ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿತ್ತು. ಹೀಗಾಗಿ ಸರ್ಕಾರಿ ಆದೇಶವನ್ನೂ (2021ರ ಮೇ 6) ಹೊರಡಿಸಿತ್ತು. ಅದರಂತೆಯೇ ಭೂಮಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಯಾವ ಅಕ್ರಮವೂ ನಡೆದಿಲ್ಲ. ಒಂದು ವೇಳೆ ಒಪ್ಪಂದ ಆಗಿದ್ದರೆ ಅದು ಬಿಜೆಪಿ ಸರ್ಕಾರದ ಜೊತೆ ಆಗಿರಬೇಕು. ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್ಗೆ ಹೋಯಿತು. ನಂತರ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಈಗ ಕೋರ್ಟ್ ನ ನಿಯಮದಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ ಎಂದು ಹೇಳಿದ್ದಾರೆ.
ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ, ಹೂಡಿಕೆ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ. ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿ ನೀಡಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿಯೇ ಭೂಮಿ ದರ ನಿಗದಿಪಡಿಸಲಾಗಿದೆ. ಹಿಂದಿನ ಬಿಜೆಪಿ ಸರಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ನೀಡಿದೆ. ಆದರೆ, ಅದರ ನೈಜ ಬೆಲೆ ಅಂದು 187 ಕೋಟಿ ರೂ ಇತ್ತು ಎಂದು ಆರೋಪಿಸಿದ್ದಾರೆ.