ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20ರಿಂದ ಮೂರು ದಿನ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಹತ್ತಾರು ಸಾಹಿತಿಗಳು, ಸಾಹಿತ್ಯೇತರ ಕ್ಷೇತ್ರಗಳ ಸಾಧಕರ ಹೆಸರು ಪ್ರಸ್ತಾಪವಾಗಿತ್ತು. ಆದರೆ, ಕೊನೆಗೆ ಚನ್ನಬಸಪ್ಪ ಅವರು ಆಯ್ಕೆಯಾದರು. ಗೊ.ರು. ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೊಂಡೇದಹಳ್ಳಿಯಲ್ಲಿ 18ನೇ ಮೇ 1930ರಲ್ಲಿ ಜನಿಸಿದ್ದರು. ಜಾನಪದ ತಜ್ಞರೂ ಆಗಿರುವ ಚನ್ನಬಸಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಹಲವಾರು ಪರಿಷತ್ತಿನ ಅಧ್ಯಕ್ಷರಾಗಿದ್ದರು.