ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೈಜೀರಿಯಾ ಮೂಲದ ಕೆಲ್ವಿನ್ ಬಂಧಿತ ವಿದೇಶಿ ಪ್ರಜೆ ಎನ್ನಲಾಗಿದೆ. ಕಾನ್ಸ್ಟೇಬಲ್ ನಾಗರಾಜ್ ಭೀಮಪ್ಪ ಎಂಬುವವರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ. 31ರ ರಾತ್ರಿ ಹೆಚ್ಬಿಆರ್ ಬಡಾವಣೆ ಹತ್ತಿರ ನಾಗರಾಜ್ ಗಸ್ತು ಕಾರ್ಯದಲ್ಲಿದ್ದರು. ಮಧ್ಯರಾತ್ರಿ 1.50 ಸುಮಾರಿಗೆ ಪತ್ನಿಯೊಂದಿಗೆ ಕೆಲ್ವಿನ್ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಪೊಲೀಸರು ಅಡ್ಡಗಟ್ಟಿ ಪ್ರಶ್ನಿಸಿದ್ದಾರೆ. ಆಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೇ, ನಾಗರಾಜ್ ಮೇಲೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಆಗ ನಾಗರಾಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂತರ ಅಲ್ಲಿಂದ ಆರೋಪಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿ ವಿರುದ್ಧ ಈಗಾಗಲೇ ಡಿಜೆ ಹಳ್ಳಿ, ಹೆಣ್ಣೂರು ಠಾಣೆಗಳಲ್ಲಿ ವಿದೇಶಿ ಕಾಯ್ದೆ ಹಾಗೂ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೆ, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿವೆ.