ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು (Public Prosecutor) ಸಮರ್ಪಕವಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಸಿಗುವಂತೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ (Vidhana Soudha) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳು ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10ರಷ್ಟಿದ್ದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೆ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ
ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.
ಇಡಿ ನೋಟೀಸಿಗೆ ಹೈ ಕೋರ್ಟ್ ತಡೆಯಾಜ್ಞೆ
ಇಡಿ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು.
ಮುಡಾ ಪ್ರಕರಣ ರಾಜಕೀಯ ಪ್ರೇರಿತ
ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.
ನ್ಯಾಯ ದೊರೆಯುವ ಭರವಸೆ
ಪ್ರಕರಣವನ್ನು ಸಿಬಿಐಗೆ ವಹಿಸಬಹುದೆಂಬ ಆತಂಕವಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ ಎಂದರು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.