ತುಮಕೂರು: ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಬಿಯರ್ ಬಾಟಲ್ ನಿಂದ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಮಧುಗಿರಿ ಪೊಲೀಸರು (Madhugiri Police) ಗುಂಡು ಹಾರಿಸಿರುವ ಘಟನೆ ನಡೆದಿದೆ.
ಆರೋಪಿಯನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎನ್ನಲಾಗಿದೆ. ಈತ 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಈತ ಎ2 ಆಗಿದ್ದ. ಹೀಗಾಗಿ ಈತನ ಬಂಧನಕ್ಕೆ ಈಜೀಹಳ್ಳಿ ಕ್ರಾಸ್ ಬಳಿ ಬಂಧಿಸಲು ಪೊಲೀಸರು ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿ, ಪೊಲೀಸ್ ಸಿಬ್ಬಂದಿ ರಮೇಶ್ ಎಂಬುವವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡೇಟು ಹಾಕಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ರಮೇಶ್‍ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಆರೋಪಿ ರಿಜ್ವಾನ್ ನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
