ಬೆಂಗಳೂರು : ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ಪಿಜಿಯಿಂದ ಹೊರಬಂದು ಟೀ ಕುಡಿಯಲು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಗುರಿಯಾಗಿಸಿಕೊಂಡು ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಒಂಟಿಯಾಗಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಗಮನಿಸಿದ ಆರೋಪಿ, ಆಕೆಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಲು ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ವಿದ್ಯಾರ್ಥಿನಿ ಜೋರಾಗಿ ಕಿರುಚಾಡಿದ್ದು, ಆಕೆಯ ಕಿರುಚಾಟ ಕೇಳಿ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜನರು ಬರುತ್ತಿರುವುದನ್ನು ಕಂಡ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.
ಘಟನೆಯ ಬಳಿಕ ವಿದ್ಯಾರ್ಥಿನಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಮಾಹಿತಿಗಳ ಆಧಾರದಲ್ಲಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ತನಿಖೆ ವೇಳೆ ರಸ್ತೆ ಬದಿಯಲ್ಲಿ ಕಸ ಹಾಗೂ ಕಬ್ಬಿಣ ಆಯುವ ಕೆಲಸ ಮಾಡುತ್ತಿದ್ದ ಸೈಬುಲ್ ಎಂಬಾತನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ವೈಟ್‌ಫೀಲ್ಡ್ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!



















