ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ 5ನೇ ಪಂದ್ಯದಲ್ಲೂ ಭಾರತ ಹೀನಾಯ ಸೋಲು ಕಂಡಿದೆ. ಈ ಮೂಲಕ 10 ವರ್ಷಗಳ ನಂತರ ಆಸ್ಟ್ರೇಲಿಯಾ ಸರಣಿ ಗೆದ್ದ ಇತಿಹಾಸ ಬರೆದಿದೆ.
ಆಸೀಸ್ ಪಡೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಭಾರತದ ವಿರುದ್ಧ 10 ವರ್ಷಗಳ ನಂತರ ಟೆಸ್ಟ್ ಸರಣಿ ಗೆಲ್ಲುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದೆ. ಭಾರತದ ವಿರುದ್ಧ ಆಸ್ಟ್ರೇಲಿಯಾ ಕೊನೆಯ ಬಾರಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದಿದ್ದು 2014-15 ರಲ್ಲಿ. ಇದಾದ ನಂತರ ಭಾರತ ತಂಡ ಸತತ 4 ಬಾರಿ ಈ ಸರಣಿ ಗೆದ್ದಿತ್ತು.
5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಕೇವಲ 185 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಪ್ರಥಮ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡವನ್ನು 181 ರನ್ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್ಗಳು ಯಶಸ್ವಿಯಾಗಿದ್ದರು.
4 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಮತ್ತೆ ಮುಗ್ಗರಿಸಿತು. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 33 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 61 ರನ್ ಗಳಿಸಿ ತಂಡದ ಮೊತ್ತ ಏರಿಸಿದ್ದರು.
ಮೂರನೇ ದಿನದಾಟದ ಆರಂಭದಲ್ಲೇ ನಾಲ್ಕು ವಿಕೆಟ್ ಕಳೆದುಕೊಂಡು 157 ರನ್ಗಳಿಗೆ ಸರ್ವಪತನ ಕಂಡಿತು. 162 ರನ್ಗಳ ಗುರಿ ಪಡೆದ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.