ವಿಜಯನಗರ: ಪರಿಸರ ಮಾಲಿನ್ಯ ತಡೆಗಟ್ಟುವ ಜೊತೆಗೆ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಹೊಸಪೇಟೆಯಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.ಹೊಸಪೇಟೆಯ ಗಾಂಧಿ ಚೌಕ್ನಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ಅವರು ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಜಾಗೃತಿ ಜಾಥಾದಲ್ಲಿ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಅಧಿಕಾರಿಗಳು, ಆಟೋ ಚಾಲಕರು, ಶಾಲಾ ಮಕ್ಕಳು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಭಾಗವಹಿಸಿದ್ದರು. ಜಾಥಾದ ಮೂಲಕ ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ ಹಾಗೂ ಸ್ವಚ್ಛ ಪರಿಸರದ ಮಹತ್ವದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.ಪರಿಸರ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂಬ ಸಂದೇಶವನ್ನು ಜಾಥಾದ ಮೂಲಕ ಸಾರಲಾಯಿತು.
ಈ ಸಂದರ್ಭದಲ್ಲಿ ಆರ್ಟಿಒ ದಾಮೋದರ್, ಡಿವೈಎಸ್ಪಿ ಮುರುಳಿಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.


















