ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಸಹಿತ ಎಲ್ಲ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲು ಮತಪತ್ರದ ಮೂಲಕ ನಡೆಸುವಂತೆ ರಾಜ್ಯ ಚುನಾವಣ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.
ಆ ಮೂಲಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಒಳಗೊಂಡು ರಾಜ್ಯ ಚುನಾವಣಾ ಆಯೋಗದ ಹೆಗಲಿನ ಮೇಲೆ ಬಂದೂಕಿಟ್ಟು ಕೇಂದ್ರ ಚುನಾವಣಾ ಆಯೋಗಕ್ಕೆ ಸೆಡ್ಡು ಹೊಡೆಯಲು ರಾಜ್ಯ ಸರ್ಕಾರ ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ(ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಒಳಪಡುವ ಎಲ್ಲಾ ನಗರ ಪಾಲಿಕೆಗಳು, ಜಿಲ್ಲಾ, ತಾಲೂಕು ಹಾಗೂ ಗ್ರಾ.ಪಂ. ಚುನಾವಣೆಗಳನ್ನು ಮತಪತ್ರದ ಮೂಲಕ ನಡೆಸುವುದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳ ಕಾಯ್ದೆಗೆ ಅಗತ್ಯ ತಿದ್ದುಪಡಿ ಮಾಡುವ ಉದ್ದೇಶದಿಂದ ನಿರ್ಧರಿಸಲಾಗಿದೆ. ಈ ಮೂಲಕ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಚುನಾವಣ ಆಯೋಗದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಇದೆ ಎಂಬ ಸಂದೇಶದ ರವಾನೆಗೂ ಸರ್ಕಾರ ಮುಂದಾಗಿದೆ.
ಈ ನಿರ್ಧಾರ ತೆಗೆದುಕೊಳ್ಳುವಾಗ ರಾಜ್ಯ ಸರಕಾರ ಎಚ್ಚರಿಕೆಯ ಹೆಜ್ಜೆಯನ್ನು ಇರಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಸೆಕ್ಷನ್ 35ಕ್ಕೆ ತಿದ್ದುಪಡಿ ಮಾಡಿ ರಾಜ್ಯ ಚುನಾವಣ ಆಯೋಗವೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕೇ ಅಥವಾ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಆದ ಮತದಾರರ ಪಟ್ಟಿ ಪರಿಷ್ಕರಣೆಯೇ ಸದ್ಯಕ್ಕೆ ಸಾಕಾಗುತ್ತದೆಯೇ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣ ಆಯೋಗ ನಗರಾಭಿವೃದ್ಧಿ ಇಲಾಖೆಗೆ ಬರೆದ ಪತ್ರಕ್ಕೆ ಉತ್ತರ ನೀಡುವ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂಗೆ ಇತಿಶ್ರೀ ಹಾಡುವ ಅಂಶವನ್ನೂ ಸೇರ್ಪಡೆ ಮಾಡಲಾಗಿದೆ.
ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್, ಇವಿಎಂ ಬದಲಾಗಿ ಮತಪತ್ರದ ಮೂಲಕ ಚುನಾವಣೆ ನಡೆಸುವುದಕ್ಕೆ ಬೇಕಾದ ಅಗತ್ಯ ಕಾನೂನು ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದೇ ರೀತಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಪಟ್ಟಿ ಪರಿಷ್ಕರಣೆ, ಹೊಸಪಟ್ಟಿ ಸಿದ್ಧಪಡಿಸುವುದಕ್ಕೆ ಕಾನೂನು ತಿದ್ದುಪಡಿ ಮಾಡಿ ನಿಯಮಾವಳಿ ರೂಪಿಸುವುದಕ್ಕೂ ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.
”ಇವಿಎಂ ಕೈ ಬಿಡುವುದಕ್ಕೆ ಕಾರಣವೇನು’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಪಾಟೀಲ್, “ಮತದಾರರ ಪಟ್ಟಿಯಲ್ಲಿ ವ್ಯಾಪ ಕ ಪ್ರಮಾಣದಲ್ಲಿ ದೋಷ ಇದೆ ಎಂದು ಇತ್ತೀಚೆನ ದಿನಗಳಲ್ಲಿ ಜನರು ಆರೋಪ ಮಾಡುತ್ತಿದ್ದಾರೆ. ವ್ಯಾಪಕ ಪ್ರಮಾಣದಲ್ಲಿ ಮತ ಕಳವು ನಡೆದಿದೆ ಎಂಬ ದೂರು ಇದೆ. ಇವಿಎಂ ದುರ್ಬಳಕೆ ಬಗ್ಗೆಯೂ ಸಾಕಷ್ಟು ಆರೋಪಗಳಿವೆ. ಹೀಗಾಗಿ ಪಾರದ ರ್ಶಕ ಚುನಾವಣೆ ನಡೆಸುವುದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಮುಂದಿನ 15 ದಿನಗಳ ಒಳಗಾಗಿ ಇದಕ್ಕೆ ಅಗತ್ಯ ಕಾನೂನು ತಿದ್ದುಪಡಿ ಮಾಡಿ ನಿಯಮ ರೂಪಿಸುತ್ತೇವೆ’ ಎಂದು ವಿವರಿಸಿದ್ದಾರೆ.