ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ದವಾಗಿ ನಡೆಸಲು ಪೂರ್ವಾ ಅನುಮತಿ ಕಡ್ಡಾಗೊಳಿಸಿದೆ. ಈ ಬೆನ್ನಲ್ಲೇ ಇದೀಗ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರಕಾರಿ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಡೆಯುವ ನಮಾಜ್ಗೂ ಬ್ರೇಕ್ ಹಾಕುವಂತೆ ಆಗ್ರಹಿಸಿದ್ದಾರೆ.
ಯತ್ನಾಳ್ ಬರೆದ ಪತ್ರದಲ್ಲಿ ಏನಿದೆ?
ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ. ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರದ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್‌ಗೆ ವಿಶೇಷ ಅನುಮತಿ ನೀಡಬಾರದು.

ಇತರ ಸಂಸ್ಥೆಗಳ ಕಾರ್ಯಚಟುವಟಿಕೆ ನಿರ್ಬಂಧಿಸಿ ಇಂತಹ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡುವುದು ಆಡಳಿತದ ಮೇಲಿನ ನಂಬಿಕೆಗೆ ಚ್ಯುತಿ ತರಬಹುದಾದ ಕಾರಣ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಆದೇಶಿಸಬೇಕು. ಅನುಮತಿಯಿಲ್ಲದೆ ರಸ್ತೆಗಳು, ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶ ನೀಡದಂತೆ ಸೂಚಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ.