ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟು ಬಿಡದೆ ಮಳೆ ಕಾಡುತ್ತಿದೆ. ಇದರಿಂದಾಗಿ ಜನರು ಕಂಗಾಲಾಗಿದ್ದಾರೆ. ಅಲ್ಲದೇ, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು (Bengaluru Rains) ಸೇರಿದಂತೆ ರಾಜ್ಯಾದ್ಯಂತ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಮಳೆಯಿಂದಾಗಿ ನಗರದ ಹಲವೆಡೆ ಜನ-ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆಯಿಂದ ಮತ್ತೊಂದು ಎಚ್ಚರಿಕೆ ಸಿಕ್ಕಿದ್ದು, ನಗರದಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೆರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದು ಮುಂದಿನ ಎರಡು ದಿನ ಕೂಡ ಮುಂದುವರೆಯಲಿದೆ. ನಾಳೆ ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಲಾಗಿದೆ.
ಅಲ್ಲದೇ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು, ನಾಳೆ ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ನಗರದ ಪ್ರಾಥಮಿಕ ಮತ್ತು ಫ್ರೌಡ ಶಾಲಾಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಐಟಿ ಕಂಪನಿಗಳು ಕೂಡ ಮಳೆಯ ಹಿನ್ನೆಲೆಯಲ್ಲಿ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಗೆ ಅವಕಾಶ ನೀಡಿವೆ. ನಗರದಲ್ಲಿ ಮಳೆಯ ಅವಾಂತರದ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ.