ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಕಾಂಗ್ರೆಸ್ ಮುಖಂಡನ (Congress Leader) ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ.
ಇಲ್ಲಿನ ಅಶೋಕನಗರದ ಗರುಡ ಮಾಲ್ ಹತ್ತಿರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹೈದರ್ ಅಲಿ (Haider Ali) ಎಂಬ ಕಾಂಗ್ರೆಸ್ ಮುಖಂಡನನ್ನು ಹತ್ಯೆ ಮಾಡಲಾಗಿದೆ. ಹೈದರ್ ಅಲಿಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.
ಲೈವ್ ಬ್ಯಾಂಡ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸ್ನೇಹಿತನ ಜೊತೆ ಬೈಕ್ನಲ್ಲಿ (Bike) ಮನೆಗೆ ತೆರಳುತ್ತಿದ್ದಾಗ ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಅಲ್ಲದೇ, ಘಟನೆಯಲ್ಲಿ ಹೈದರ್ ಅಲಿಯ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಕೂಡಲೇ ಬೋರಿಂಗ್ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೈದರ್ ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ಹೈದರ್ ಅವರ ಬೆಂಬಲಿಗರು ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಲಾಂಗು, ಮಚ್ಚು ಹಿಡಿದು ಝಳಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ನಿಕಟವರ್ತಿಯಾಗಿದ್ದ ಹೈದರ್ ಅಲಿ, ಅವರ ಪರ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.