ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕಿ ಬೇಗಂ ಖಲೀದಾ ಜಿಯಾ (80) ಅವರು ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಬೇಗಂ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸುತ್ತಾರೆ ಎಂದು ಭಾವಿಸಲಾಗಿತ್ತು. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷೆ ನಿಧನಕ್ಕೆ ಪಕ್ಷವು ಸಂತಾಪ ಸೂಚಿಸಿದೆ.
ನವೆಂಬರ್ 23 ರಂದು ಹೃದಯ ಮತ್ತು ಶ್ವಾಸಕೋಶದಲ್ಲಿ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 36 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಜಿಯಾ, ಯಕೃತ್ತಿನ ಸಿರೋಸಿಸ್, ಸಂಧಿವಾತ, ಮಧುಮೇಹ ಮತ್ತು ಮೂತ್ರಪಿಂಡಗಳು, ಶ್ವಾಸಕೋಶಗಳು, ಹೃದಯ ಮತ್ತು ಕಣ್ಣುಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಮಸ್ಯೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಬಾಂಗ್ಲಾದೇಶ, ಯುಕೆ, ಯುಎಸ್, ಚೀನಾ ಮತ್ತು ಆಸ್ಟ್ರೇಲಿಯಾದ ತಜ್ಞರು ಚಿಕಿತ್ಸೆ ನೀಡುತ್ತಿದ್ದರು.
ಖಲೇದಾ ಜಿಯಾ 1991–1996 ಹಾಗೂ 2001–2006ರ ಅವಧಿಯಲ್ಲಿ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು. ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ರಾಜಕೀಯದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಶೇಖ್ ಹಸೀನಾ ಅವರ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿಯೂ ಆಗಿದ್ದರು.
ಇದನ್ನೂ ಓದಿ: ಪದವಿ ಕನಸು ಕಂಡವರಿಗೆ ಗಡಿಪಾರು ಭೀತಿ : ಜರ್ಮನಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಅತಂತ್ರ ಸ್ಥಿತಿ



















