ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಇಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಂದಿದ್ದ ಇಮೇಲ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಲಾಗಿತ್ತು. ತಕ್ಷಣವೇ ಇಸ್ರೋ ಅಧಿಕಾರಿಗಳು ಸಂಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು, ಸಿಐಎಸ್ಎಫ್ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಡಾಗ್ ಸ್ಕ್ವಾಡ್ ಸ್ಥಳಕ್ಕೆ ಭೇಟಿ ನೀಡಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.
ಕೆಲವೇ ದಿನಗಳ ಹಿಂದೆ ಇದೇ ರೀತಿಯ ಬೆದರಿಕೆ ಇಮೇಲ್ ಕಳುಹಿಸಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್‌ನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಬೆದರಿಕೆ ಮೇಲ್ ಬಂದಿರುವ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಮೇಲ್ ಮೂಲ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್ ಚಾಲನೆ – ಮೂವರು ಸಸ್ಪೆಂಡ್


















