ಬೆಂಗಳೂರು: ರಸ್ತೆ ಬದಿ ಅನಧಿಕೃತವಾಗಿ ವಾಹನ ನಿಲುಗಡೆ ಮಾಡುವ ವಾಹನ ಸವಾರರಿಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಎಚ್ಚರಿಕೆ ನೀಡಿದ್ದು, ಜಯನಗರ ವಲಯದಲ್ಲಿ ಮುಂದಿನ ವಾರದಿಂದ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ನಡೆಸಿದೆ.
ಅಸಮರ್ಪಕ ಪಾರ್ಕಿಂಗ್ ನಿಯಂತ್ರಣ ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮೂರು ನೂತನ ಟೋಯಿಂಗ್ ವಾಹನಗಳನ್ನು ಸಜ್ಜುಗೊಳಿಸಿದೆ. ಈ ವಾಹನಗಳನ್ನು ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ಆಯುಕ್ತ ಕೆ.ಎನ್. ರಮೇಶ್ ಪರಿಶೀಲನೆ ನಡೆಸಿದ್ದಾರೆ.
ಸಾರಿಗೆ ಇಲಾಖೆಯಿಂದ ಫಿಟ್ನೆಸ್ ಪ್ರಮಾಣಪತ್ರ ಪಡೆದಿರುವ ಟೋಯಿಂಗ್ ವಾಹನಗಳನ್ನು ಶೀಘ್ರದಲ್ಲೇ ಸಂಚಾರ ಪೊಲೀಸರಿಗೆ ಹಸ್ತಾಂತರಿಸಲಾಗುವುದು. ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಜಯನಗರದ ಪ್ರಮುಖ ರಸ್ತೆಗಳಲ್ಲಿ ಅನಧಿಕೃತ ಪಾರ್ಕಿಂಗ್ ವಿರುದ್ಧ ವಿಶೇಷ ಟೋಯಿಂಗ್ ಕಾರ್ಯಾಚರಣೆ ಆರಂಭವಾಗಲಿದೆ.
ರಸ್ತೆ ಬದಿ ಸಂಚಾರ ನಿಯಮ ಉಲ್ಲಂಘಿಸಿ ವಾಹನ ನಿಲುಗಡೆ ಮಾಡಿದರೆ ಅಂತಹ ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ನಿಗದಿತ ಸ್ಥಳಗಳಲ್ಲಿಯೇ ವಾಹನಗಳನ್ನು ನಿಲುಗಡೆ ಮಾಡುವಂತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮನವಿ ಮಾಡಿದೆ. ಈ ಕ್ರಮದಿಂದ ಸಂಚಾರ ಸುಗಮಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಉತ್ತಮ ರಸ್ತೆ ವ್ಯವಸ್ಥೆ ಕಲ್ಪಿಸುವುದು ಉದ್ದೇಶವಾಗಿದೆ.



















