ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣದಲ್ಲಿ ಪೊಲೀಸ್ ತನಿಖೆ ಎದುರಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತಮ್ಮ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಎಸ್.ಜೀವಾ 2023ರ ಆಗಸ್ಟ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜೀವಾ ಅವರು ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ನ.14ರಂದು ಹಾಜರಾಗಿ ತನಿಖೆಗೆ ಸಹಕಾರ ನೀಡಬೇಕು. ವಿಚಾರಣಾ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಿ, ವರದಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.
ಆದರೆ, ಜೀವಾ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯನ್ನು ಖಂಡಿಸಿರುವ ಬೆಂಗಳೂರು ವಕೀಲರ ಸಂಘವು ಜೀವಾ ಅರ್ಜಿಗೆ ಮಧ್ಯಂತರ ಅರ್ಜಿ ಸಲ್ಲಿಸಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೋರಿತ್ತು. ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಪ್ರಕರಣ ಕುರಿತ ತನಿಖೆಯ ಸಮಗ್ರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದೆ.