ಬೀದರ್ : ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ನಾರ್ಕೊಟಿಕ್ಸ್ ತಂಡ ನಡೆಸಿದ ದಾಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಗಾಂಜಾ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗಮೇಶ್ವರ ಕಾಲೋನಿಯ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಒಟ್ಟು 38 ಕೆಜಿ 476 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಗಾಂಜಾದ ಮೌಲ್ಯ ಸುಮಾರು 19,23,800 ರೂಪಾಯಿ ಎಂದು ಅಂದಾಜಿಸಲಾಗಿದೆ.
ಅಕ್ರಮವಾಗಿ ಗಾಂಜಾ ಸಂಗ್ರಹಣೆ ಹಾಗೂ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರ ವಿರುದ್ಧ ಗಾಂಧಿಗಂಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಅಪರಾಧ ಸಂಖ್ಯೆ 96/2026 ಅಡಿಯಲ್ಲಿ ದಾಖಲಿಸಿಕೊಂಡಿರುವ ಪೊಲೀಸರು, ಎನ್‌ಡಿಪಿಎಸ್ ಕಾಯ್ದೆಯ ಕಲಂ 20(ಬಿ)(2)(ಸಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಹಾವೇರಿಯಲ್ಲಿ ಕೀಟನಾಶಕ ಸೇವಿಸಿ ಪಿಡಿಓ ಆತ್ಮಹತ್ಯೆ!



















