ದಾವಣಗೆರೆ : ಹರಿಹರ ಪೀಠದ ವಚನಾನಂದ ಶ್ರೀಗೆ ಪೋಕ್ಸೋ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದ್ದು, ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಆ ಜಾಮೀನನ್ನು ರದ್ದುಪಡಿಸುವಂತೆ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಜೂ.25 ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಶ್ರೀಗಳ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿತ್ತು. ಅಲ್ಲದೇ ರೆಗ್ಯುಲರ್ ಜಾಮೀನು ಪಡೆಯಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಆ ಬಳಿಕ ವಚನಾನಂದ ಶ್ರೀ ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಜೂ.27ರಂದು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?


















