ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಜುಲೈ 15ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕೋರ್ಟ್ ವಿನಾಯಿತಿ ನೀಡಿದೆ. ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಹಾಗೂ ಜಾಮೀನು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳು ಶುಕ್ರವಾರ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.
ಆಗ ಕೆಲ ಕಾಲ ವಿಚಾರಣೆ ಆಲಿಸಿದ ನ್ಯಾಯಾಲಯ “ಪ್ರಕರಣ ಮುಂದೂಡುವಂತೆ ಮಾಡಿದ ಮನವಿಯನ್ನು ಮಾನ್ಯ ಮಾಡಲಾಗಿದೆ. ಹೀಗಾಗಿ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿದಾರರ ಖುದ್ದು ಹಾಜರಿಗೆ ಜುಲೈ 28ರವರೆಗೆ ವಿನಾಯಿತಿ ನೀಡಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಲಾಯಿತು.
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ಜೂನ್ 27ರಂದು ಬಿಎಸ್ ಯಡಿಯೂರಪ್ಪ ಮತ್ತಿತರರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ಹೈಕೋರ್ಟ್ ಅವರನ್ನು ಬಂಧಿಸದಂತೆ ಪೊಲೀಸರಿಗೆ ನಿರ್ಬಂಧ ವಿಧಿಸಿತ್ತು.