ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಮತ್ತಜನಹಳ್ಳಿ ಗ್ರಾಮದ ಕಣಿವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಕರಿಬಸವ (58) ಮೃತಪಟ್ಟಿದ್ದು, ಸದಾಶಿವ (32) ಗಾಯಗೊಂಡಿದ್ದಾರೆ. ಇಬ್ಬರೂ ಮತ್ತಜನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಚೋರ್ನೂರಿನಿಂದ ಗುಡೇಕೋಟೆ ಕಡೆಗೆ ಸಂಚರಿಸುತ್ತಿದ್ದ ಸರ್ಕಾರಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕರಿಬಸವ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದಾಶಿವ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ತಿಳಿದು ಗುಡೇಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ : ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ‘ಫಾರ್ಮಾಲಿನ್’ ಚುಚ್ಚಿ ಕೊಂದ ನರ್ಸ್!



















