ಬೆಂಗಳೂರು: ಬಿಜೆಪಿಯ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿರುವ ಮುಖಂಡೆ. ಮತ್ತಿಕೆರೆಯ ಮನೆಯಲ್ಲಿ ಮಂಜುಳಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಇಂದು ಮಧ್ಯಾಹ್ನ 2:30ರ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯಶವಂತಪುರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜುಳಾ, ಕೆಲ ತಿಂಗಳ ಹಿಂದೆಯಷ್ಟೇ ಪತಿಯನ್ನು ಕಳೆದುಕೊಂಡಿದ್ದರು. ಇತ್ತೀಚೆಗೆ ಬಿಜೆಪಿ ಸೆಕ್ರೆಟರಿ ಹುದ್ದೆ ಬದಲಾಯಿಸುವ ಮಾತುಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಮಂಜುಳಾ ನೊಂದಿದ್ದರು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.