ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾ ಅವರನ್ನು ಪಕ್ಷದ ಹಿರಿಯ ನಾಯಕರು ಸ್ವಾಗತಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರು ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ್ ರೆಡ್ಡಿ, ಶಾಸಕರಾದ ಧೀರಜ್ ಮುನಿರಾಜು, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿದ್ದರು.
ಈಗಾಗಲೇ ಬಿಜೆಪಿಯ 18 ಜನ ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ಮಾಡಿ ಆದೇಶ ಹೊರಡಿಸಿದ್ದಾರೆ. ಈ ವಿಷಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ದೊಡ್ಡ ಯುದ್ಧವೇ ನಡೆಯುತ್ತಿದೆ. ಅಲ್ಲದೇ, ಬಿಜೆಪಿ ಆಂತರಿಕ ಕಚ್ಚಾಟವೂ ಜೋರಾಗಿದೆ. ಯತ್ನಾಳ್ ಮತ್ತು ಟೀಂ ದೆಹಲಿಗೆ ಹೋಗಿ ಬಂದ ನಂತರ ಕೆಲವು ದಿನ ಮೌನವಾಗಿ, ಈಗ ಮತ್ತೆ ಬಹಿರಂಗವಾಗಿ ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲವು ವಿಷಯದಲ್ಲಿ ಪಕ್ಷದ ಹಿರಿಯರ ಮಧ್ಯೆ ವೈಮನಸ್ಸು ಉಂಟಾಗುತ್ತಿರುವುದು ಬಹಿರಂಗವಾಗುತ್ತಿದೆ. ಇವುಗಳ ಮಧ್ಯೆ ಜೆ.ಪಿ. ನಡ್ಡಾ ರಾಜ್ಯಕ್ಕೆ ಆಗಮಿಸಿದ್ದು, ಹಲವಾರು ಸಂಶಯಕ್ಕೆ ಕಾರಣವಾಗುತ್ತಿದೆ.