ಬೆಂಗಳೂರು: ನಮ್ಮ ಮುಂದೆ ಮುಂದೆ ಬಿಜೆಪಿಯ ಆಟ ನಡೆಯಲ್ಲ. ನನಗೆ ರಾಜಕೀಯ ಚದುರಂಗ ಗೊತ್ತು. 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಮಹಿಳೆಯರಲ್ಲಿ ಶಕ್ತಿ ತುಂಬಿಸಲು ಅನೇಕ ಕಾರ್ಯಕ್ರಮ ರೂಪಿಸಿದೆ. ಪಕ್ಷದ ಆಚಾರ ವಿಚಾರ ಹಾಗೂ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡಿ, ಆಗ 2028ರಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಕಿವಿ ಮಾತು ಹೇಳಿದ್ದಾರೆ.
ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳ ಫಲಾನುಭವಿಗಳಿಗೆ ಕಾಂಗ್ರೆಸ್ ಸರ್ಕಾರದ ಕೊಡುಗೆಗಳನ್ನು ಮನದಟ್ಟು ಮಾಡಿ. ಆಮೂಲಕ ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿ. ಆಗ ಬಿಜೆಪಿಯವರು ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದಿದ್ದಾರೆ.
ಯಾವ ರೀತಿ ರಾಜಕಾರಣ ಮಾಡಬೇಕು, ಅವರು ಏನೇ ಚದುರಂಗ ಆಟವಾಡಿದರೂ ಹೇಗೆ ಚೆಕ್ ಮೇಟ್ ನೀಡಬೇಕು ಎಂದು ನನಗೆ ಗೊತ್ತಿದೆ ಎಂದು ಗುಡುಗಿದ್ದಾರೆ.