ಬೆಳಗಾವಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಆದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್ ಗೆ ಭಾರೀ ಮುಖಭಂಗ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ತಂದೆ ಹಾಗೂ ಅವರ ಪುತ್ರನೇ ಕಾರಣ. ಬಿಜೆಪಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಹೀನಾಯ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಒಳ ಒಪ್ಪಂದದಿಂದ ಬಿಜೆಪಿಗೆ ಈ ಸ್ಥಿತಿ ಬರುತ್ತಿದೆ. ಇನ್ನಾದರೂ ಹೈಕಮಾಂಡ್ ಈ ಕುರಿತು ಗಂಭೀರವಾಗಿ ಚರ್ಚಿಸಬೇಕು ಎಂದು ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರ ಮೇಲೆ ಹಾಕಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಒರ್ವ ಯಡಿಯೂರಪ್ಪ ಹಾಗೂ ವಿಜಯೇಂದ್ರ ಸಂದೇಶ ವಾಹಕನಾಗಿ ಕೆಲಸ ಮಾಡುತ್ತಿದ್ದಾರೆ. ವಿಜಯೇಂದ್ರ ಅವರನ್ನ ಜನರು ತಿರಸ್ಕಾರ ಮಾಡಿದ್ದಾರೆ. ಇನ್ನಾದರೂ ಬಿಜೆಪಿ ಹೈಕಮಾಂಡ್ ತಂದೆ-ಮಗನ ವ್ಯಾಮೋಹದಿಂದ ದೂರವಿರಲಿ. ನಾಚಿಕೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಗುಡುಗಿದ್ದಾರೆ.