ದಾವಣಗೆರೆ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಆಗ್ರಹಿಸಿ ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾದಿಗ ಸಮುದಾಯದಿಂದ ಕಪ್ಪು ಪಟ್ಟಿ ಪ್ರದರ್ಶಿಸಿ ಹೋರಾಟ ನಡೆಸಿದ ಹಿನ್ನಲೆ, ಇಪ್ಪತ್ತಕ್ಕೂ ಹೆಚ್ಚು ಮಾದಿಗ ಸಮುದಾಯದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರಲು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿದೆ. ಇದೇ ರೀತಿ ಆದರೆ, ನಾವು ಉಗ್ರ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈಗ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಆ ಆದೇಶವನ್ನು ಪಾಲನೆ ಮಾಡುವಂತೆ ಮಾದಿಗ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

















