ಉಡುಪಿ: ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಒಟ್ಟು 13.92 ಕೋಟಿ ರೂ. ನಷ್ಟ ಉಂಟಾಗಿರುವುದು ತನಿಖೆಯಲ್ಲಿ ದೃಢಪಟ್ಟಿದ್ದು, ಆಡಳಿತ ಮಂಡಳಿ ಮೇಲೆ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಕಾರ್ಖಾನೆಗೆ ಒಟ್ಟು 13.92 ಕೋಟಿ ರೂ. ಆರ್ಥಿಕ ನಷ್ಟ ಉಂಟಾಗಲು ಆಡಳಿತ ಮಂಡಳಿ, ಟೆಂಡರ್ ಕಮ್ ಹರಾಜಿನ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಆಗಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್ ಬಿ. ನಾಯಕ್ ಮತ್ತು ಜಿ. ಎನ್. ಲಕ್ಷ್ಮೀನಾರಾಯಣ ಅವರ ನಿರ್ಲಕ್ಷ್ಯವೇ ಇದಕ್ಕೆ ಮುಖ್ಯ ಕಾರಣ ಎಂಬುದು ತನಿಖಾ ವರದಿಯಿಂದ ತಿಳಿದು ಬಂದಿದೆ.
ಹೀಗಾಗಿ ಈ ಹಿಂದೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್ ಬಿ. ನಾಯ್ಕ ಹಾಗೂ ಜಿ. ಎನ್. ಲಕ್ಷ್ಮೀನಾರಾಯಣ ಅವರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗೂ ಈ ಇಬ್ಬರು ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆಗೆ ಸಹಕಾರ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಅಲ್ಲದೆ ನಷ್ಟದ ಹಣವನ್ನು ಸಂಬಂಧಪಟ್ಟವರಿಂದ ವಸೂಲು ಮಾಡಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರದ ಅನುಮತಿ ಪಡೆದು ಆಡಳಿತ ಮಂಡಳಿಯ ಕಾರ್ಖಾನೆ ಕಟ್ಟಡ ಮತ್ತು ಯಂತ್ರೋಪಕರಣಗಳನ್ನು ಚೆನ್ನೈನ ನ್ಯೂ ರಾಯಲ್ ಟ್ರೇಡರ್ಸ್‌ಗೆ ಮಾರಾಟ ಮಾಡಿತ್ತು. ಈ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.
ಅವ್ಯವಹಾರದ ಆರೋಪಗಳು ಕೇಳಿ ಬಂದಾಗ ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ. ರಾಧಾಕೃಷ್ಣ ಹೊಳ್ಳ ಅವರನ್ನು ನೇಮಕ ಮಾಡಲಾಗಿದ್ದು, ಅವರು ಸಲ್ಲಿಸಿರುವ ವರದಿಯಲ್ಲಿ ಅವ್ಯವಹಾರ ಸಾಬೀತಾಗಿದೆ ಎಂದು ಸಚಿವರು ತಿಳಿಸಿದ್ದಾರೆ.