ಮಂಡ್ಯ: ಸಾರಿಗೆ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ (KR Pete) ತಾಲೂಕಿನ ಕುಂದಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆಎಸ್ ಆರ್ ಟಿಸಿ (KSRTC) ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಬೆಳಗ್ಗೆ ಆಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ ಕೆಎಸ್ ಆರ್ ಟಿಸಿ ಬಸ್ ಬರುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಇದ್ದ ಬೃಹತ್ ಮರಕ್ಕೆ ಬಸ್ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಬಸ್ಸಿನಲ್ಲಿದ್ದರು ಎನ್ನಲಾಗಿದೆ. ಹಲವು ಮಕ್ಕಳ ಕೈ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಐವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಲವರನ್ನು ಮೈಸೂರಿಗೆ ದಾಖಲಿಸಲಾಗಿದೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.