ಬೆಂಗಳೂರು: ಆಂಧ್ರಪ್ರದೇಶದಲ್ಲಿ ನಡೆದ ಕರ್ನಾಟಕದ ಈರ್ವರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ, ಶೀಘ್ರವೇ ತನಿಖೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.
ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಖಾತೆ ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾಗಿದ್ದ ಕೆ.ವಿ.ಪ್ರಶಾಂತ್ ರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿ ರೆಡ್ಡಿ ಹತ್ಯೆಗೀಡಾಗಿರುವ ಘಟನೆ ಅತ್ಯಂತ ಅಮಾನವೀಯ ಹಾಗೂ ದುಃಖಕರ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ದುರ್ಘಟನೆಯನ್ನು ಖಂಡಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಕೊಲೆಗಡುಕರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆ ಚುರುಕುಗೊಳಿಸಲಿ ಎಂದವರು ಆಗ್ರಹಿಸಿದ್ದಲ್ಲದೇ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲಿ. ಮೃತರ ಕುಟುಂಬ ವರ್ಗದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದಿದ್ದಾರೆ.
ಏನಿದು ಪ್ರಕರಣ?
ವೀರಸ್ವಾಮಿ ರೆಡ್ಡಿ ಹಾಗೂ ಕೆ.ವಿ.ಪ್ರಶಾಂತ್ ರೆಡ್ಡಿ ಬುಧವಾರ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ತೆರಳುತ್ತಿದ್ದರು. ಈ ವೇಳೆ 6 ಜನ ದುರ್ಷ್ಕಮಿಗಳು ಕಪ್ಪು ಬಣ್ಣದ ಕಾರಿನಲ್ಲಿ ಬಂದು ಇಬ್ಬರನ್ನು ಅಪಹರಿಸಿ ಬಳಿಕ ಕತ್ತು ಕೊಯ್ದು ಕೊಲೆ ಮಾಡಿದ್ದರು.



















