ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆಯೇ ಈಗ ದೆಹಲಿ ಬಿಜೆಪಿ ಸರ್ಕಾರವು ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಮಹಿಳಾ ಸಮೃದ್ಧಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನವಾದ ಶನಿವಾರ ಈ ಯೋಜನೆಗೆ ಶನಿವಾರ ದೆಹಲಿ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯ ಪರಿಚಯದಿಂದಾಗಿ ದೆಹಲಿಯಲ್ಲಿ ಮಹಿಳಾ ಸಬಲೀಕರಣ ಪ್ರಾರಂಭವಾಗಿದೆ. ಮಹಿಳೆಯರ ಬೆಂಬಲವಿಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಪಕ್ಷದ ಯಶಸ್ಸಿನಲ್ಲಿ ಮಹಿಳೆಯರ ಪಾತ್ರ ಮಹತ್ವವಾದದ್ದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
ಸಂಪುಟ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ರೇಖಾ ಗುಪ್ತಾ, ‘ಮಹಿಳಾ ಸಮೃದ್ಧಿ ಯೋಜನೆ ಜಾರಿ ಮಾಡುವುದಕ್ಕಾಗಿ ನನ್ನ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗುತ್ತದೆ. ಈ ಯೋಜನೆಯಡಿ ಅರ್ಹ ಮಹಿಳೆಯರು ಪ್ರತಿ ತಿಂಗಳು 2,500 ರೂ. ಪಡೆಯಲಿದ್ದಾರೆ. ಅಂದಾಜು 5,100 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಯಾಗಲಿದೆ. ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಕ್ತ ವೆಬ್‌ಸೈಟ್ ಅನ್ನು ಶೀಘ್ರದಲ್ಲೇ ರಚನೆ ಮಾಡಲಾಗುತ್ತದೆ’ ಎಂದಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಮಹಿಳೆಯರಿಗೆ 2,500 ರೂ. ನೀಡುವುದಾಗಿ ಬಿಜೆಪಿ ಘೋಷಣೆ ಮಾಡಿತ್ತು. ಮೊದಲ ಸಂಪುಟ ಸಭೆಯಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿತ್ತು. ಆದರೆ, ಮೊದಲ ಸಂಪುಟದಲ್ಲಿ ಘೋಷಣೆ ಮಾಡಿಲ್ಲ ಎಂಬ ವಿಚಾರವನ್ನೇ ಅಸ್ತ್ರವಾಗಿಟ್ಟುಕೊಂಡು ಆಮ್ ಆದ್ಮಿ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿತ್ತು.