ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರಸ್ಥರು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಡಿ. 31 ರಿಂದ ಸಾರಿಗೆ ಮುಷ್ಕರಕ್ಕೆ ನೌಕರಸ್ಥರು ಕರೆ ನೀಡಿದ್ದಾರೆ. ಡಿಸೆಂಬರ್-9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ‘ಬೆಳಗಾವಿ ಚಲೋ’ ಕೈಗೊಂಡು ಸಿಎಂ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಸಾರಿಗೆ ನೌಕರಸ್ಥರರ ಸಂಘಟನೆಯ ಮುಖಂಡರು ಹೇಳಿದ್ದಾರೆ.
ಮುಷ್ಕರಕ್ಕೂ ಮುನ್ನ 21 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಹೀಗಾಗಿ ಡಿಸೆಂಬರ್- 9 ರಂದು ಸಿಎಂಗೆ ನೋಟಿಸ್ ನೀಡಿ ಡಿ. 31ರಿಂದ ಮುಷ್ಕರ ನಡೆಸಲಾಗುವುದು ಎಂದು ಹೇಳಿದ್ದಾರೆ. ಆರು ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, ಆ ಆರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಒಂದು ವೇಳೆ ಸಿಎಂ ಸ್ಪಂದಿಸದಿದ್ದರೆ, ಬಸ್ ಸಂಚಾರ ಸ್ಥಗಿತಗೊಳ್ಳಲಿವೆ. ಈ ಹಿಂದೆಯೂ ಮೂರು ದಿನ ಮುಷ್ಕರ ಮಾಡಿದ ಮೇಲೆ ಸಿದ್ದರಾಮಯ್ಯ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದರು ಎಂದು ಮುಖಂಡರು ಹೇಳಿದ್ದಾರೆ.
ರಾಜ್ಯ ಸರ್ಕಾರ ನಾಲ್ಕು ನಿಗಮದ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು. ಆದರೆ ನವೆಂಬರ್ ತಿಂಗಳು ಬಂದರೂ ಈ ಕುರಿತು ನಿರ್ಧರಿಸಿಲ್ಲ. ಅರಿಯರ್ಸ್ ಹಣವೇ 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರೂ. ಬಾಕಿ ಇದೆ. ಹೀಗಾಗಿ ಬೇಡಿಕೆ ಈಡೇರುವವರೆಗೂ ಹೋರಾಟ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಹೇಳಿದ್ದಾರೆ.