ಮೈಸೂರು : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿ ನರಸೀಪುರ ತಾಲ್ಲೂಕಿನ ಚೌಹಳ್ಳಿ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ.
ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿಯ ಹೊಡೆತಕ್ಕೆ ಆಟೋದಲ್ಲಿದ್ದ ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿರುವ ಕಾರಣ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಟಿ. ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಎತ್ತಿನ ಗಾಡಿ ಕಾರಿನ ಮಧ್ಯೆ ಭೀಕರ ಅಪಘಾತ – 2 ಎತ್ತುಗಳು ಸ್ಥಳದಲ್ಲೇ ಸಾವು!



















