ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ 9 ಜನ ಗಾಯಗೊಂಡಿದ್ದ (Injured) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಮಾಲಾಧಾರಿಗಳು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮಾಲಾಧಾರಿಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.
ನಿಜಲಿಂಗಪ್ಪ ಬೇಪುರಿ(58) ಮತ್ತು ಸಂಜಯ ಸವದತ್ತಿ (20) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಈ ಘಟನೆಯ ಬೆನ್ನಲ್ಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಸಚಿವರು ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.
ನಂತರ ಮಾತನಾಡಿದ ಅವರು, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಅವರನ್ನು ಬದುಕಿಸಿಕೊಳ್ಳುವ ಎಲ್ಲ ಪ್ರಯತ್ನ ಮಾಡಿದೆವು ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಒಬ್ಬರನ್ನು ಹೊರತುಪಡಿಸಿ ಉಳಿದವರ ಸ್ಥಿತಿಯು ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರದ ಬಳಿ ದೊಡ್ಡ ಡ್ರಾಮಾ ಕೂಡ ನಡೆಯಿತು. ಮೃತ ನಿಜಲಿಂಗಪ್ಪನ ಶವಕ್ಕಾಗಿ ಇಬ್ಬರ ಹೆಂಡತಿಯರ ಮಧ್ಯೆ ಜಗಳ ನಡೆದಿದೆ. ನಿಜಲಿಂಗಪ್ಪನ ಮೊದಲ ಮತ್ತು ಎರಡನೇ ಹೆಂಡತಿಯ ಮಧ್ಯೆ ಶವಕ್ಕಾಗಿ ಜಗಳ ನಡೆಯಿತು. ತನ್ನ ಮನೆ ಬಳಿ ಪೂಜೆ ಮಾಡಲು ಮೊದಲು ಅವಕಾಶ ಮಾಡುವಂತೆ ಇಬ್ಬರೂ ಜಗಳಾಡಿಕೊಂಡಿದ್ದಾರೆ. ಆನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.