ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಅರ್ಥಾತ್ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯದ ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ಅರ್ಥಾತ್ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಗಣತಿದಾರರು ಎಲ್ಲರ ಮನೆಗಳಿಗೂ ಭೇಟಿ ನೀಡಿ ಜನರ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಯನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ.
2014-15ರಲ್ಲಿ ನಡೆಸಿದ್ದ ಸಮೀಕ್ಷೆಯು ಹತ್ತು ವರ್ಷ ಹಳೆಯದಾಗಿದೆ ಹಾಗೂ ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿಲ್ಲ. ಎಲ್ಲರ ಮನೆ ಬಾಗಿಲಿಗೂ ಹೋಗಿ ಸಮೀಕ್ಷೆ ನಡೆಸದೇ ಎಲ್ಲೋ ಕುಳಿತುಕೊಂಡು ಸಮೀಕ್ಷೆಯ ಅಂಕಿಅಂಶಗಳನ್ನು ದಾಖಲಿಸಿದ್ದಾರೆ.
ಸಿಎಂ ನೇತೃತ್ವದಲ್ಲಿ ನಡೆದ ಜಾತಿ ಗಣತಿ ಸಭೆಯ ಮುಖ್ಯಾಂಶಗಳು :
ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
- ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.
- ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ.
- ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.
- ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.
- ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ.
- ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು.
- ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
- ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು.
- ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.



















