ಮೈಸೂರು : ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ತಡರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಗಾಂಜಾ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ತೋಟಿ ಮಂಜು, ಕುಂಟ ಮಂಜ ಹಾಗೂ ಕಾರ್ತಿಕ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 10 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಕಾರಿನ ಮೂಲಕ ಗಾಂಜಾವನ್ನು ಸಾಗಿಸುತ್ತಿದ್ದರೆಂಬ ಮಾಹಿತಿ ಆಧರಿಸಿ ಪೊಲೀಸರು ತಪಾಸಣೆ ನಡೆಸಿದ್ದು, ಕಾರಿನೊಳಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗಾಂಜಾ ಪತ್ತೆಯಾಗಿದೆ. ಬಳಿಕ ಮೂವರನ್ನೂ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಆರೋಪಿಗಳು ಬಳಸುತ್ತಿದ್ದ ಕಾರನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ ಹಾಗೂ ಸಾಗಣೆ ಜಾಲವನ್ನು ಪತ್ತೆಹಚ್ಚಲು ಸಿಸಿಬಿ ಪೊಲೀಸರು ನಿರಂತರ ಕಾರ್ಯಾಚರಣೆ ಮುಂದುವರಿಸಿದ್ದು, ಈ ಪ್ರಕರಣ ಮತ್ತೊಂದು ದೊಡ್ಡ ಜಾಲದ ಸುಳಿವು ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳ ಹಿಂದಿರುವ ಮತ್ತಷ್ಟು ಸಂಪರ್ಕಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!



















