ಬೆಂಗಳೂರು: ಇಂದು ನಡೆಯಲಿರುವ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಬೆಂಗಳೂರು ಸಜ್ಜಾಗಿದೆ. ಈ ಬಾರಿ ಸುಮಾರು 10 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಭಾರೀ ಜನಸ್ತೋಮವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಇದರ ಜೊತೆಗೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲೂ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಈ ಹಿನ್ನೆಲೆ ನಿನ್ನೆ ರಾತ್ರಿ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಲೈಟಿಂಗ್ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳು ಸೇರಿದಂತೆ ಭದ್ರತಾ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಾಯಿತು. ಜೊತೆಗೆ GBA (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ವ್ಯವಸ್ಥೆಯ ಕಾರ್ಯಚಟುವಟಿಕೆಗಳನ್ನೂ ಆಯುಕ್ತರು ಅವಲೋಕಿಸಿದ್ದಾರೆ.
ಕರಗ ಶಕ್ತ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಸುರಕ್ಷಿತವಾಗಿ ಉತ್ಸವ ನಡೆಯಲು ಅಧಿಕಾರಿಗಳು ಪೂರ್ಣ ಸಿದ್ಧತೆಯೊಂದಿಗೆ ತೊಡಗಿದ್ದಾರೆ.
ಇದನ್ನೂ ಓದಿ : ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು



















