ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಕನಿಷ್ಠ 16 ನಕ್ಸಲೀಯರು ಹತರಾಗಿದ್ದು, ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಘಟಕದ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸುಕ್ಮಾ ಜಿಲ್ಲೆಯ ಕೆರ್ಲಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಯಿತು. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಬಸ್ತರ್ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿ) ಸುಂದರ್‌ರಾಜ್ ಪಿ ಹೇಳಿದ್ದಾರೆ.
ಶುಕ್ರವಾರ ರಾತ್ರಿ ಕೆರ್ಲಪಾಲ್ ಪ್ರದೇಶದಲ್ಲಿ ಮಾವೋವಾದಿಗಳು ಉಳಿದಿರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ಆರಂಭಿಸಲಾಗಿತ್ತು. ಬೆಳಿಗ್ಗೆ ಭದ್ರತಾ ಪಡೆಗಳು ಮಾವೋವಾದಿಗಳ ಇರುವ ಜಾಗವನ್ನು ಸಮೀಪಿಸಿದಾಗ ಗುಂಡಿನ ದಾಳಿ ಆರಂಭವಾಯಿತು ಎಂದು ಐಜಿ ಸುಂದರ್‌ರಾಜ್ ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಡಿಆರ್‌ಜಿ ಯೋಧರು ಗಾಯಗೊಂಡಿದ್ದಾರೆ. ಅವರ ಸ್ಥಿತಿ ಸುಧಾರಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಭದ್ರತಾ ಪಡೆಗಳು ನಕ್ಸಲೀಯರ ಮೇಲೆ ಪ್ರಾಬಲ್ಯ ಸಾಧಿಸಿವೆ.