ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ನಿಗಮದ ಹಣವನ್ನು ನಾಗೇಂದ್ರ ಅವರು ಎಲ್ಲೂ ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಹಗರಣದ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಈ ಪ್ರಕರಣದಲ್ಲಿ ಪ್ರಮುಖ ‘ಸಾಕ್ಷಿ’ಗಳನ್ನಾಗಿ ಪರಿಗಣಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇನ್ನು ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಅವರನ್ನು ಈ ಹಗರಣದ ಪ್ರಮುಖ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.
















