ಬೆಂಗಳೂರು : ನಗರದ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಪರ-ವಿರೋಧ ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ಮೂರು ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ಮತ್ತು ಅವರ ತಂಡ ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆಯಲ್ಲಿ ಮುರಳಿ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು FIR ದಾಖಲು
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರಕರಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಗುಂಪುಗಳ ನಡುವೆ ಶತ್ರುತ್ವ ಉಂಟುಮಾಡಿದ ಆರೋಪದಡಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ, ಪುನೀತ್ ಗೌಡ, ವಿನೋದ್ ನಾಯಕ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಎರಡನೇ ಪ್ರಕರಣದಲ್ಲಿ ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಮಲ್ ಪಾಷಾ, ಅಬೂಬಕರ್ ಸಿದ್ಧೀಕ್ ಮತ್ತು ಸೈಯದ್ ಅನಾಸ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ. ಪ್ರಕರಣ ಸಂಬಂಧ ಮೂವರು ಅಪ್ರಾಪ್ತರನ್ನೂ ವಶಕ್ಕೆ ಪಡೆಯಲಾಗಿದೆ.
ಮೂರನೇ ಪ್ರಕರಣದಲ್ಲಿ ಸಾರ್ವಜನಿಕ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಘಟನಾ ಸ್ಥಳದಲ್ಲಿದ್ದ ಕೆಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಘಟನೆ ಬಳಿಕ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ತೆರಳುವ ವೇಳೆ ವಿಕ್ಟೋರಿಯಾ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಮುತ್ತಿಗೆ ಯತ್ನ ನಡೆದಿರುವ ಆರೋಪವೂ ಕೇಳಿಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರು ಡಿಸಿಪಿಗಳು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಪ್ರತಿಕ್ರಿಯಿಸಿ, ಮೆರವಣಿಗೆ ಸಾಗುತ್ತಿದ್ದ ವೇಳೆ ಸಂಜೆ ಸುಮಾರು 4 ಗಂಟೆಗೆ ಗಲಾಟೆ ನಡೆದ ಬಗ್ಗೆ ಮಾಹಿತಿ ಬಂದ ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಎರಡೂ ಕಡೆಯವರಿಂದ ದೂರು ಪಡೆದು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ. ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಲಾಟೆಗೆ ನಿಖರ ಕಾರಣವೇನು, ಯಾವ ರೀತಿಯಲ್ಲಿ ಹಲ್ಲೆ ನಡೆದಿದೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು, ಸ್ಥಳದಲ್ಲಿ ಶಾಂತಿ ನೆಲೆಸಿದೆ ಎಂದು ಡಿಸಿಪಿ ವಂಶಿಕೃಷ್ಣ ತಿಳಿಸಿದ್ದಾರೆ.
ಇದನ್ನೂ ಓದಿ : ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!


















