ಬೆಂಗಳೂರು: ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿರುವ ನಾಗರಬಾವಿಯ ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮತ್ತೆ ಘರ್ಷಣೆ ಸಂಭವಿಸಿದೆ. ಮಲ್ಲತ್ತಹಳ್ಳಿಯ ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶಾಸಕ ಮುನಿರತ್ನ ಉಪಸ್ಥಿತಿಯಲ್ಲೇ ಬಿಜೆಪಿ ಕಾರ್ಯಕರ್ತರು ಮತಗಟ್ಟೆ ಬಳಿ ಕೆಲವು ಹೊತ್ತು ತೀವ್ರ ಪ್ರತಿಭಟನೆ ನಡೆಸಿದರು. ಸದ್ಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.














